ಶನಿವಾರ, ಮಾರ್ಚ್ 23, 2013

ಮಂಗಳೂರು : ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡ

ಮಂಗಳೂರು : ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡ


ಮಂಗಳೂರು : ಹೋಂ ಸ್ಟೇ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಮಾಹಿತಿ ನೀಡದೇ ಚಿತ್ರೀಕರಣ ನಡೆಸಿ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಪತ್ರಕರ್ತ ನವೀನ್ ಸೂರಿಂಜೆ ಇಂದು ಜಾಮೀನಿನ ಮೇಲೆ ಬಿಡುಗಡೆಯಾದರು . ಬಿಡುಗಡೆಯ ಸಮಯದಲ್ಲಿ ಡಿ.ವೈ.ಎಫ್.ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಸೇರಿದಂತೆ ಹಲವು ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರು ಜೈಲಿನ ಹೊರಭಾಗದಲ್ಲಿ ನವೀನ್ ಅವರನ್ನು ಸ್ವಾಗತಿಸಿದರು .
ಹೋಂ ಸ್ಟೇ ದಾಳಿಯ ವೇಳೆ ಹಲ್ಲೆಗೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿ ವಿಜಯ್ ಕುಮಾರ್ ನ್ಯಾಯಾಲಯದ ಮುಂದೆ ಹಾಜರಾಗಿ ದಾಳಿಯ ವೇಳೆ ನವೀನ್ ಸೂರಿಂಜೆ ಗಿಂತ ಮೊದಲು ಪೊಲೀಸರು ಘಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು ಎಂಬುವುದಾಗಿ ಹೈಕೋರ್ಟಿಗೆ ತಿಳಿಸಿದ ಹಿನ್ನಲೆಯಲ್ಲಿ ಹೈಕೋರ್ಟ್ ಐದು ಲಕ್ಷ ರೂಪಾಯಿ ಬಾಂಡ್ ಮೇಲೆ ನವೀನ್ ಸೂರಿಂಜೆಗೆ ಜಾಮೀನು ಮಂಜೂರು ಮಾಡಿದೆ .

ಭಾನುವಾರ, ಮಾರ್ಚ್ 17, 2013

ಗಲ್ಫ್ ಮಂಗಳೂರಿಗರ ಒಗ್ಗಟ್ಟಿನಿಂದ ಜೈಲು ವಿಮೋಚನೆಗೊಂಡ ಲೋಹಿತಾಕ್ಷ


ರಿಯಾದ್: ಕಳೆದ ಎಂಟು ತಿಂಗಳಿಂದ ತನ್ನದಲ್ಲದ ತಪ್ಪಿಗೆ ಶಿಕ್ಷೆಗೆ ಗುರಿಯಾಗಿ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಮಂಗಳೂರು ದೇರೆಬೈಲು ಕೊಂಚಾಡಿ ನಿವಾಸಿ ಲೋಹಿತಾಕ್ಷ ಮಂಗಳೂರು ಅಸೋಸಿಯೇಶನ್ ಫಾರ್ ಸೌದಿ ಅರೇಬಿಯಾ (MASA) ಮತ್ತು ಇತರ ಕೆಲವು ಸಮಾನ ಮನಸ್ಕ ಸಂಘಟನೆಗಳ ನೆರವಿನೊಂದಿಗೆ ಬಿಡುಗಡೆಗೊಂಡಿದ್ದಾರೆ। ಕರ್ನಾಟಕದಲ್ಲಿ ನಡೆದ ಹಾಲಪ್ಪ, ನಿತ್ಯಾನಂದರ ರಾಸಲೀಲೆಗಳ ಸುದ್ದಿಗಳ ಭರಾಟೆಯಲ್ಲಿರುವ ಕನ್ನಡ ನಾಡಿನ ಪತ್ರಿಕೆಗಳಿಗೆ ಈ ವಿಷಯ ಒಂದು ದೊಡ್ಡ ಸುದ್ಧಿಯಾಗಿ ಕಾಣಲೇ ಇಲ್ಲ।

ಗಲ್ಫ್ ನಾಡಿನಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಬಹಳ ಸಣ್ಣ ಪ್ರಮಾಣದಲ್ಲಿರುವ ಕನ್ನಡಿಗರ ಸಂಘಗಳು ಮಾಡಿದ ಈ ಕೆಲಸ ಅಷ್ಟು ಸುಲಭವಾಗಿ ತಳ್ಳಿಬಿಡುವಂತಹದ್ದಲ್ಲ। ಗಲ್ಫ್ ನಾಡಿನಲ್ಲಿ ಸದಾ ಒತ್ತಡದ ನಡುವೆ ಬಿಡುವಿಲ್ಲದೆ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವ ವಿದೇಶಿಯರು ಸಂಘಟಿತರಾಗುವುದು ಅಷ್ಟೊಂದು ಸುಲಭವಲ್ಲ। ಹಾಗೇನಾದರೂ ಸಂಘಟಿತವಾಗಿದ್ದರೆ ಅದು ಹೆಚ್ಚಿನದಾಗಿ ಕೇರಳೀಯರು. ತಮ್ಮ ರಾಜ್ಯದ ಜನರಿಗೆ ಏನಾದರೂ ಆದರೆ ಅದಕ್ಕೆ ಅತೀ ಶೀಘ್ರ ಸ್ಪಂದಿಸುವ ಮಲಯಾಳಿ ಸಂಘಟನೆಗಳನ್ನು ನಾನು ನೋಡಿದ್ದೇನೆ.


ಸಂಘಟಿತ ಹೋರಾಟಕ್ಕೆ ಜಯ:ಅದೇ ರೀತಿ ಈಗ ಮಾಸಾದ ನೇತೃತ್ವದಲ್ಲಿ ಸೌದಿ ಅರೇಬಿಯಾ ಮತ್ತು ಯು.ಎ.ಇ. ಯ ಕೆಲವು ಸಂಘಟನೆಗಳು ಒಂದಾಗಿ ಲೋಹಿತಾಕ್ಷರನ್ನು ಬಿಡುಗಡೆ ಮಾಡಿಸಿದ್ದು ಕನ್ನಡಿಗರು ಒಂದಾದಲ್ಲಿ ಏನನ್ನೂ ಸಾಧಿಸಿಯಾರು ಎಂಬ ಸಂದೇಶವನ್ನು ಅಸಂಘಟಿತ ಗಲ್ಫ್ ಕನ್ನಡಿಗರ ಮುಂದೆ ಸಾಧಿಸಿ ತೋರಿಸುವುದರ ಜೊತೆಗೆ ಕನ್ನಡಿಗರನ್ನು ಸಂಘಟಿತರಾಗುವಂತೆ ಪ್ರೇರೇಪಿಸಿದೆ. ಅಸಲಿಗೆ ಲೋಹಿತಾಕ್ಷರನ್ನು ಜೈಲಿಗೆ ತಳ್ಳಲು ಕಾರಣವೇನು ಎಂದು ನೋಡಿದರೆ ವಿದೇಶಿಯರ ಜೊತೆ ಇಲ್ಲಿ ಎಂತಹ ಅನ್ಯಾಯಗಳು ಕೆಲವೊಮ್ಮೆ ನಡೆಯುತ್ತವೆ ಎಂಬ ವಾಸ್ತವ ವಿಚಾರವನ್ನು ನಮ್ಮ ಮುಂದಿಡುತ್ತವೆ. ಕಳೆದ ಹದಿನೈದು ವರ್ಷಗಳಿಂದ ಸೌದಿ ಅರೇಬಿಯಾದ ಬಂದರು ನಗರ ದಮ್ಮಾಮಿನಲ್ಲಿ ವೃತ್ತಿಯಲ್ಲಿ ಕ್ರೇನ್ ಚಾಲಕರಾಗಿ ದುಡಿಯುತ್ತಿರುವ ಲೋಹಿತಾಕ್ಷ ತಮ್ಮ ಕಷ್ಟದ ಕೆಲಸದ ನಡುವೆಯೂ ನಿಷ್ಠೆಯಿಂದ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದರು.

ಆದರೆ ಈ ಹದಿನೈದು ವರ್ಷದಲ್ಲಿ ನಡೆಯದ ಅನೀರೀಕ್ಷಿತ ಅಪಘಾತವೊಂದು ಅವರ ಜೀವನದಲ್ಲಿ ನಡೆಯಿತು. ಅವರು ನಿಯಂತ್ರಿಸುತ್ತಿದ್ದ ಕ್ರೇನ್ ಅಕಸ್ಮಾತ್ತಾಗಿ ಅವರ ನಿಯಂತ್ರಣ ತಪ್ಪಿ ಹೊಂಡವೊಂದಕ್ಕೆ ಬಿದ್ದು ಪುಡಿಪುಡಿಯಾಯಿತು.ಏನೋ ದೇವರ ದಯೆ ಲೋಹಿತಾಕ್ಷ ಯಾವುದೇ ರೀತಿಯ ಅಪಾಯವಿಲ್ಲದೆ ಪಾರಾದರು. ಆದರೆ ಇಲ್ಲಿ ವಿಧಿ ಅವರ ಬೆನ್ನು ಬಿಡಲಿಲ್ಲ. ಮಾಲೀಕ ತನ್ನ ಕ್ರೇನ್ ಪುಡಿಯಾದ ಬಗ್ಗೆ ಇವರ ವಿರುದ್ಧವೇ ದೂರು ಕೊಟ್ಟ. ದೂರಿನ ಪ್ರಕಾರ ಹಿಂದು ಮುಂದು ನೋಡದೆ ಪೊಲೀಸರು ಇವರನ್ನು ಬಂಧಿಸಿ ಜೈಲಿಗೆ ತಳ್ಳಿದರು. ಹರಕೆಯ ಕುರಿಯಾದ ಲೋಹಿತಾಕ್ಷ:ವಾಸ್ತವವಾಗಿ ನೋಡುವುದಾದರೆ ಈ ಅಪಘಾತದಲ್ಲಿ ಲೋಹಿತಾಕ್ಷರದೇನೂ ತಪ್ಪಿಲ್ಲ. ನಡೆಯಬೇಕಾಗಿದ್ದ ಒಂದು ದುರ್ಘಟನೆ ಅನೀರೀಕ್ಷಿತವಾಗಿ ನಡೆದು ಹೋಗಿತ್ತು. ಆದರೆ ಇದರಲ್ಲಿ ಸುಮ್ಮನೆ ಲೋಹಿತಾಕ್ಷ ಬಲಿಪಶುವಾದರು. ಆನಂತರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕ್ರೇನ್ ಮಾಲೀಕನಿಗೆ ಪರಿಹಾರವಾಗಿ ಲೋಹಿತಾಕ್ಷ ಹತ್ತು ಲಕ್ಷ ರೂಪಾಯಿ ಅಂದರೆ ಎಂಬತ್ತು ಸಾವಿರ ರಿಯಾಲ್ ಪರಿಹಾರ ಕೊಡಬೇಕೆಂದು ತೀರ್ಪಾಯಿತು. ಹೇಳಿ ಕೇಳಿ ಲೋಹಿತಾಕ್ಷ ಕಡಿಮೆ ಸಂಬಳಕ್ಕೆ ದುಡಿಯುವ ಒಬ್ಬ ಬಡ ಕಾರ್ಮಿಕ . ಎಲ್ಲಿಂದ ಹೊಂದಿಸಿಯಾರು ಅಷ್ಟೊಂದು ದೊಡ್ಡ ಮೊತ್ತವನ್ನು ?. ಅದಲ್ಲದೆ ಎಂಟು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಇಂತಹವರಿಗೆ ಹತ್ತು ಲಕ್ಷ ರೂಪಾಯಿ ದಂಡ ಹಾಕಿದರೆ ಅವರು ಏನು ಮಾಡಿಯಾರು ? ಲೋಹಿತಾಕ್ಷ ಜೀವನದ ಆಸೆಯನ್ನೇ ಬಿಟ್ಟರು. ಒಮ್ಮೆ ಮನೆಗೆ ದೂರವಾಣಿ ಕರೆ ಮಾಡಿದ ಅವರು ತನ್ನ ಬರುವಿಕೆಯ ಬಗೆಗಿನ ಆಸೆಯನ್ನು ಬಿಟ್ಟುಬಿಡುವಂತೆ ಹೇಳಿದ್ದರಂತೆ.

ಆದರೆ ಈ ವಿಷಯ ತಿಳಿದ masa ದ ಅಧ್ಯಕ್ಷ ಮಾಧವ ಅಮೀನ್ ಜಾಗೃತರಾದರು.ಸೌದಿ ಅರೇಬಿಯಾದಲ್ಲಿ ಕನ್ನಡಿಗರ ಸೇವೆಯಲ್ಲಿ ಸದಾ ಮುಂದೆ ನಿಲ್ಲುವ ಮಾಧವ ಅಮೀನ್ ತನ್ನ ಸಂಘಟನೆಯ ಉಪಾಧ್ಯಕ್ಷರಾದ ರವಿ ಕರ್ಕೇರಾ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಹಾಗೂ ಪಧಾದಿಕಾರಿಗಳಾದ ಮಧುಕರ ದೇವಾಡಿಗ, ಬಾಬು ಕೋಟೆಬೆಟ್ಟು, ದಯಾನಂದ ಶ್ರೀಯಾನ್, ಅಲ್ ರಾಜಿ ಬ್ಯಾಂಕಿನ ವಸಂತ್ ಕುಮಾರ್ ಹೆಗ್ಡೆ ಅವರೊಂದಿಗೆ ಸೇರಿ ಈ ವಿಷಯದಲ್ಲಿ ಲೋಹಿತಾಕ್ಷರಿಗೆ ನೆರವಾಗಬೇಕೆಂದು ರಂಗಕ್ಕಿಳಿದರು. ಜೊತೆಗೆ ಇವರು ತಮ್ಮ ಸಂಘಟನೆಯ ಪರವಾಗಿ ಸ್ವಲ್ಪ ಮಟ್ಟಿಗಿನ ಹಣವನ್ನು ಸಂಗ್ರಹಿಸಿದರು. ಇವರ ಈ ಕೆಲಸವನ್ನು ಗಮನಿಸಿದ ಕರಾವಳಿಯ ಜನತೆ ಹಾಗೂ ಸಂಘ ಸಂಸ್ಥೆಗಳು ಇವರ ಬೆಂಬಲಕ್ಕೆ ನಿಂತು ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ಹಣ ಸಂಗ್ರಹಿಸಿ ಕೊಟ್ಟವು. ರಿಯಾದ್ ಕರಾವಳಿ ಅಸೋಸಿಯೇಶನ್ ಅಧ್ಯಕ್ಷ ವಿಜಯ್ ರೈ, ರಿಯಾದ್ ಬಂಟರ ಸಂಘದ ಮೋಹನದಾಸ್ ಶೆಟ್ಟಿ, ಭಟ್ಕಳ ಸಮಾಜದ ಅರ್ಶದ್, ಜುಬೈರ್, ಫಯಾಜ್, ಮಂಗಳೂರಿನ ರೋಯಿಸ್ತನ್ ಪ್ರಭು ಹಾಗೂ ಇತರರು ತಮ್ಮ ಕೈಲಾದ ನೆರವು ನೀಡುವುದರ ಜೊತೆಗೆ ಈ ಕಾರ್ಯದಲ್ಲಿ ತಮ್ಮ ಸಹಕಾರವನ್ನೂ ಕೊಟ್ಟರು.

ಇತ್ತ ಸೌದಿ ಅರೇಬಿಯಾದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದರೆ ಅತ್ತ ಯು.ಎ.ಇ. ಯಲ್ಲಿ ಶೋಧನ್ ಪ್ರಸಾದ್ ಈ ವಿಷಯದಲ್ಲಿ ರಂಗಕ್ಕಿಳಿದಿದ್ದರು. ಮಿತ್ರ ಅಫ್ರೋಜ್ ಅಸ್ಸಾದಿ ಜೊತೆ ನಮ್ಮ ತುಳುವೆರ್, ದೇವಾಡಿಗ ಸಂಘ ಈ ಕಾರ್ಯದಲ್ಲಿ ಇವರ ಬೆಂಬಲಕ್ಕೆ ನಿಂತವು. ಈ ಎಲ್ಲಾ ಸಹೃದಯರ ನೆರವಿನಿಂದ ಕೊನೆಗೂ ಜೂನ್ ಎಂಟರಂದು ಲೋಹಿತಾಕ್ಷರ ಬಿಡುಗಡೆಯಾಯಿತು. ಲೋಹಿತಾಕ್ಷರನ್ನು ಆದರದಿಂದ ಬರಮಾಡಿಕೊಂಡ MASA ಸಂಘಟನೆಯ ಪಧಾದಿಕಾರಿಗಳು ಅವರನ್ನು ಎರಡೇ ದಿನಗಳಲ್ಲಿ ತಾಯ್ನಾಡಾದ ಮಂಗಳೂರಿಗೆ ಬೀಳ್ಕೊಟ್ಟರು. ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದ ಒಬ್ಬ ಅನಿವಾಸಿ ಕನ್ನಡಿಗನ ನೆರವಿಗೆ ಧಾವಿಸಿದ MASA ದ ಪದಾಧಿಕಾರಿಗಳಿಗೆ ಅವರ ಬೆಂಬಲಕ್ಕೆ ನಿಂತ ಕೊಲ್ಲಿ ರಾಷ್ಟ್ರದ ಅನಿವಾಸಿ ಕನ್ನಡ ಸಂಘ ಸಂಸ್ಥೆಗಳಿಗೆ ಮತ್ತು ನಾಗರೀಕರಿಗೆ, ಈ ವಿಷಯವನ್ನು ಜನರ ಮುಂದೆ ತಂದ ದಾಯ್ಜಿ ವರ್ಲ್ಡ್ ತಂಡಕ್ಕೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಬೇಕಾದದ್ದು ಪ್ರತಿಯೊಬ್ಬ ಅನಿವಾಸಿ ಕನ್ನಡಿಗನ ಕರ್ತವ್ಯ ಎಂದರೂ ತಪ್ಪಾಗಲಾರದು.


- ಅಶ್ರಫ್ ಮಂಜ್ರಾಬಾದ್. ಸಕಲೇಶಪುರ

ಮಂದಿರ ಮಸೀದಿಗಳು ಆರ್ಥಿಕ ಲಾಭಕ್ಕಾಗಿ ನಿರ್ಮಿಸಲಾಗಿವೆಯೇ...?


ಮಂದಿರ ಮಸೀದಿಗಳು ಆರ್ಥಿಕ ಲಾಭಕ್ಕಾಗಿ ನಿರ್ಮಿಸಲಾಗಿವೆಯೇ...? ಹೀಗೊಂದು ಸಂಶಯ ಮೂಡಿದ್ದು ಮೊನ್ನೆ ಪುತ್ತೂರು ಕ್ಷೇತ್ರದ ಮಾನ್ಯ ಶಾಸಕಿಯಾದ ಶ್ರೀಮತಿ ಮಲ್ಲಿಕಾ ಪ್ರಸಾದ್ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಯಿಂದ !. ತಾನು ಶಾಸಕಿಯಾಗಿ ಆಯ್ಕೆಯಾದ ನಂತರ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಬಾಯ್ಬಿಟ್ಟ ಮಲ್ಲಿಕಾ ಪ್ರಸಾದ್ ತನ್ನದೇ ಸರ್ಕಾರದ ಅಲ್ಪಸಂಖ್ಯಾತರ ಖಾತೆ ಸಚಿವ ಶ್ರೀ ಮುಮ್ತಾಜ್ ಅಲೀಖಾನ್ ರವರ ಬಳಿ ಕೇಳಿದ್ದು ರಾಜ್ಯದಲ್ಲಿರುವ ಮಸೀದಿಗಳಿಂದ ಸರ್ಕಾರಕ್ಕೆ ಬರುವ ಆದಾಯ ಎಷ್ಟು ಎಂದಾಗಿತ್ತು. ತನ್ನ ಕ್ಷೇತ್ರದ ಮೂಲಭೂತ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳಿಗೆ ವಿಧಾನ ಮಂಡಲ ಅಧಿವೇಶನ ಒಂದು ಅತ್ತ್ಯುತ್ತಮ ವೇದಿಕೆ. ಆದರೆ ಇಲ್ಲಿ ಒಬ್ಬ ಶಾಸಕಿ ತನ್ನ ದೀರ್ಘಕಾಲದ ಮೌನದ ನಂತರ ಮೊದಲ ಪ್ರಶ್ನೆ ಕೇಳಿದ್ದು ರಾಜ್ಯದ ಮತ್ತು ತನ್ನ ಕ್ಷೇತ್ರದ ಸಮಸ್ಯೆಗಳ ಬದಲು ಈ ರಾಜ್ಯದ ಮಸೀದಿಗಳಿಂದ ಸರ್ಕಾರಕ್ಕೆ ಬರುವ ಆದಾಯವೆಷ್ಟು ? ಎಂಬುವುದಾಗಿತ್ತು.

ವಾಸ್ತವವಾಗಿ ನೋಡುವುದಾದರೆ ಈ ಪ್ರಶ್ನೆಯೇ ಬಾಲಿಶವಾದದ್ದು. ರಾಜ್ಯದಲ್ಲಿರುವ ಅಥವಾ ದೇಶದಲ್ಲಿರುವ ಯಾವುದೇ ಮಂದಿರ ಅಥವಾ ಮಸೀದಿಗಳು ಆರ್ಥಿಕ ಲಾಭದ ಉದ್ದೇಶದಿಂದ ನಿರ್ಮಿಸಲ್ಪಟ್ಟವಲ್ಲ. ಅದೂ ಅಲ್ಲದೆ ಇವುಗಳಲ್ಲಿ ಹೆಚ್ಚಿನವು ಸರ್ಕಾರದ ಯಾವುದೇ ಸಹಾಯವಿಲ್ಲದೆ ಭಕ್ತರ ದೇಣಿಗೆಯಿಂದ ನಿರ್ಮಾಣವಾದಂತಹವುಗಳು. ಇಲ್ಲಿ ಭಕ್ತರು ತಮ್ಮಲ್ಲಿರುವ ದೈವಭಕ್ತಿಯಿಂದ ತಮ್ಮ ದುಡಿಮೆಯ ಒಂದು ಪಾಲನ್ನು ದೇಣಿಗೆ ರೂಪದಲ್ಲಿ ಕೊಟ್ಟು ಆರಾಧನಾಲಯಗಳನ್ನು ನಿರ್ಮಿಸಿ ಅಲ್ಲಿ ಪ್ರಾರ್ಥಿಸುವುದರ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಇವುಗಳ ನಿರ್ಮಾಣ ಮನುಷ್ಯನ ಧಾರ್ಮಿಕ ನಂಬಿಕೆಗಳಿಗೆ ಸಂಭಂದಿಸಿದೆಯೇ ಹೊರತು ಇಲ್ಲಿ ಯಾವುದೇ ಲಾಭದ ಉದ್ದೇಶವಿರುವುದಿಲ್ಲ.

ಆದರೂ ಕೆಲವು ಪ್ರಭಾವಿ ವ್ಯಕ್ತಿಗಳು ಕೆಲವು ಧಾರ್ಮಿಕ ಸ್ಥಳಗಳನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡು ಆ ಮೂಲಕ ಕೋಟ್ಯಾಂತರ ರೂಗಳನ್ನು ಸಂಪಾದಿಸುವುದರ ಜೊತೆಗೆ ಸರ್ಕಾರದ ಕೃಪಾಕಟಾಕ್ಷದಿಂದ ಅನೇಕ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳನ್ನು ತೆರೆದು ಆ ಮೂಲಕ ಸರ್ಕಾರದಿಂದ ಮತ್ತು ವಿಧ್ಯಾರ್ಥಿಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಕೊಳ್ಳೆಹೊಡೆಯುತ್ತಿರುವುದನ್ನು ಕಾಣಬಹುದು. ಅದೂ ಅಲ್ಲದೆ ಇವರು ರಾಜ್ಯದಲ್ಲಿ ಪರ್ಯಾಯ ಸರ್ಕಾರದ ಮಾದರಿ ಆಡಳಿತ ನಡೆಸುತ್ತಿರುವುದನ್ನೂ ಕಾಣಬಹುದು. ಇಂತಹ ಆರ್ಥಿಕ ಲಾಭದಾಯಕ ಜೊತೆಗೆ ರಾಜಕೀಯ ಕೃಪಾಕಟಾಕ್ಷವುಳ್ಳ ಧಾರ್ಮಿಕ ಸ್ಥಳಗಳಿಗೆ ನಮ್ಮ ಮುಖ್ಯಮಂತ್ರಿಗಳು ಬಜೆಟ್ಟಿನಲ್ಲಿ ಕೋಟ್ಯಾಂತರ ರೂಪಾಯಿಗಳನ್ನು ಕೊಟ್ಟದ್ದನ್ನೂ ನಾವು ಕಾಣಬಹುದು.

ಇವೆಲ್ಲಾ ನಡೆದದ್ದು ಹೆಚ್ಚಾಗಿ ಮಾನ್ಯ ಮಲ್ಲಿಕಾ ಪ್ರಸಾದರ ಪಕ್ಷದ ಆಡಳಿತದ ಸರ್ಕಾರದಲ್ಲಿ. ಹೀಗಿರುವಾಗ ಮಲ್ಲಿಕಾ ಪ್ರಸಾದ್ ಕೇವಲ ರಾಜ್ಯದಲ್ಲಿರುವ ಮಸೀದಿಗಳಿಂದ ಸರ್ಕಾರಕ್ಕೆ ಬರುವ ಆದಾಯವೆಷ್ಟು ಎಂಬ ಅವರ ಪ್ರಶ್ನೆ ಅವರಲ್ಲಿರುವ ಕೋಮುವಾದಿ ಮನಸ್ಥಿತಿಯಿಂದ ಬಂದ ಪ್ರಶ್ನೆಯೇ ಹೊರತು ಇದರಲ್ಲಿ ಇನ್ನಾವ ಸಮಾಜಸೇವಾ ಉದ್ದೇಶವೂ ಇಲ್ಲ.

ಈ ಪ್ರಶ್ನೆ ಎಷ್ಟು ಬಾಲಿಶವಾದುದೆಂದರೆ ಸರ್ಕಾರಿ ಆಸ್ಪತ್ರೆಗಳಿಂದ ಸರ್ಕಾರಕ್ಕೆ ಬರುವ ಆದಾಯವೆಷ್ಟು ಎಂದು ಕೇಳಿದ ರೀತಿ ಇದೆ. ಯಾವ ಸಂಸ್ಥೆಗಳು ಜನರ ಹಣದಿಂದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಸ್ಥಾಪಿಸಲ್ಪಟ್ಟಿರುತ್ತವೆಯೋ ಅಲ್ಲಿಗೆ ಮತಭೇಧವಿಲ್ಲದೆ ಸಹಾಯ ಮತ್ತು ಸಹಕಾರ ನೀಡಬೇಕಾದುದು ಪ್ರಜ್ಞಾವಂತ ಸರ್ಕಾರದ ಕರ್ತವ್ಯ. ಆದರೆ ಅವುಗಳಲ್ಲಿ ಲಾಭ ಹುಡುಕುವ ಶ್ರೀಮತಿ ಮಲ್ಲಿಕಾ ಪ್ರಸಾದರ ಅರ್ಥಶಾಸ್ತ್ರ ಜ್ಞಾನವನ್ನು ಯಾವ ರೀತಿ ವಿಮರ್ಶಿಸಬೇಕೆಂದು ಬಹುಶ ಖ್ಯಾತ ಅರ್ಥಶಾಸ್ತ್ರಜ್ಞರಿಗೂ ಸಾಧ್ಯವಾಗಲಾರದು. ಕೇವಲ ಒಂದು ಫ್ಯಾಸಿಸ್ಟ್ ಸಂಘಟನೆಯ ಮುಖಂಡನ ಹೆಂಡತಿ ಎಂಬ ಒಂದೇ ಒಂದು ಕಾರಣಕ್ಕಾಗಿ ಶ್ರೀಮತಿ ಶಕುಂತಲಾ ಶೆಟ್ಟಿಯವರ ಟಿಕೆಟ್ ತಪ್ಪಿಸಿ ಪುತ್ತೂರು ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದ ಶ್ರೀಮತಿ ಮಲ್ಲಿಕಾ ಪ್ರಸಾದರ ಬಾಯಿಯಿಂದ ಇಂತಹ ಪ್ರಶ್ನೆಗಳನ್ನಲ್ಲದೆ ಇನ್ನ್ಯಾವುದನ್ನು ನಿರೀಕ್ಷಿಸಲು ಸಾಧ್ಯ...
 
- ಅಶ್ರಫ್ ಮಂಜ್ರಾಬಾದ್. ಸಕಲೇಶಪುರ